ಬೆಂಗಳೂರು, ಏ. 10, ನ್ಯೂಸ್ ಎಕ್ಸ್ ಪ್ರೆಸ್: ಐಟಿ ದಾಳಿ ವಿರೋಧಿಸಿ ಪ್ರತಿಭಟನೆ ನಡೆಸಿದವರ ಮೇಲೆ ಚುನಾವಣಾ ಆಯೋಗದ ದೂರಿನ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಐಟಿ ಕಚೇರಿ ಎದುರು ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಪ್ರತಿಭಟನೆ ನಡೆಸಿದ್ದರು. ಚುನಾವಣಾ ಆಯೋಗದ ದೂರು ಆಧರಿಸಿ ಸಿಎಂ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಡಿಕೆ ಶಿವಕುಮಾರ್ ಸೇರಿದಂತೆ ಹಲವರ ವಿರುದ್ಧ ದೂರು ದಾಖಲಾಗಿದೆ. ಮಾರ್ಚ್ 28 ರಂದು ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಐಟಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದು, ಕರ್ತವ್ಯ ನಿರ್ವಹಿಸಲು ಅಡ್ಡಿ ಎಂದು ದೂರು ನೀಡಲಾಗಿದೆ. ಮುಖ್ಯ ಚುನಾವಣಾಧಿಕಾರಿ ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆದಿದ್ದು, ಇದನ್ನು ಆಧರಿಸಿ ಎಫ್ಐಆರ್ ದಾಖಲಿಸಲಾಗಿದೆ. ಅನುಮತಿ ಇಲ್ಲದೇ ಪ್ರತಿಭಟನೆ ನಡೆಸಿದ ಹಿನ್ನಲೆಯಲ್ಲಿ ಐಟಿ ಇಲಾಖೆಯಿಂದಲೂ ನೋಟಿಸ್ ನೀಡಲಾಗಿದೆ ಎನ್ನಲಾಗಿದೆ.