ಹುಬ್ಬಳ್ಳಿ, ಆ. 8 : ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಸತತ ಐದನೇ ದಿನವೂ ಮಳೆಯ ಆರ್ಭಟ ಮುಂದುವರಿದಿದ್ದು, ಬುಧವಾರ ಸಂಜೆಯ ನಂತರ ಅಬ್ಬರ ಸ್ವಲ್ಪ ಕಡಿಮೆಯಾಗಿದೆ. ಧಾರವಾಡ ಜಿಲ್ಲೆಯಲ್ಲಿ ಸುಮಾರು 1243 ಮನೆಗಳು ಕುಸಿದಿವೆ. ಹಾವೇರಿ ಜಿಲ್ಲೆಯಲ್ಲಿ 389 ಮನೆಗಳಿಗೆ ಹಾನಿಯಾಗಿದೆ. ಧಾರವಾಡ ಜಿಲ್ಲೆಯಲ್ಲಿ 3, ಹಾವೇರಿ ಜಿಲ್ಲೆಯಲ್ಲಿ 2 ದಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಕ್ಯಾಲಕೊಂಡ ಗ್ರಾಮದಲ್ಲಿ ಮನೆಯೊಂದು ಬಿದ್ದು ಮೂವರು ಗಾಯಗೊಂಡಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ 6, ಹಾವೇರಿಯಲ್ಲಿ 3 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ.
ಮಲಪ್ರಭಾ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಬಿಟ್ಟಿರುವುದರಿಂದ ಗದಗ ಜಿಲ್ಲೆಯ ನರಗುಂದ, ರೋಣ ತಾಲೂಕಿನ ನದಿಯಂಚಿನ ಗ್ರಾಮಗಳಲ್ಲಿ ಪ್ರವಾಹದ ಅಪಾಯ ಎದುರಾಗಿದ್ದು, ಎರಡೂ ತಾಲೂಕಿನ 2,857 ಕುಟುಂಬಗಳ 13,398 ಸಾವಿರ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ನರಗುಂದ, ರೋಣ ತಾಲೂಕು ಹಾಗೂ ಶಿರಹಟ್ಟಿತಾಲೂಕಿನ ಗ್ರಾಮಾಂತರ ಪ್ರದೇಶದ ಶಾಲೆಗಳಿಗೆ ಗುರುವಾರ ರಜೆ ಘೋಷಿಸಲಾಗಿದೆ. ನವಲಗುಂದ ತಾಲೂಕಿನ ಬೆಣ್ಣಿಹಳ್ಳ- ತುಪರಿಹಳ್ಳ ಅಪಾಯದ ಮಟ್ಟಮೀರಿ ಹರಿಯುತ್ತಿದ್ದು, 4 ಸೇತುವೆಗಳು ಮುಳುಗಡೆಯಾಗಿವೆ. ಅಳ್ನಾವರದಲ್ಲಿ 270ಕ್ಕೂ ಹೆಚ್ಚು ಮಂದಿಯನ್ನು ಪರಿಹಾರ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.