ದೇವನಹಳ್ಳಿ, ನ. 9: ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ 178-ಹೊಸಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಭಾರತ ಚುನಾವಣಾ ಆಯೋಗವು ಉಪ ಚುನಾವಣೆ ಘೋಷಿಸಿರುವ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ನವೆಂಬರ್ 11 ರಿಂದ ಕಟ್ಟುನಿಟ್ಟಿನ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಡಿಸೆಂಬರ್ 5 ರಂದು ಚುನಾವಣೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ತಿಳಿಸಿದರು.
ತಾಲೂಕಿನ ಚಪ್ಪರದ ಕಲ್ಲು ಸರ್ಕಲ್ ಬಳಿ ಇರುವ ಜಿಲ್ಲಾ ಸಂಕೀರ್ಣ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಗಳ ಕಚೇರಿ ಸಭಾಂಗಣದಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಚುನಾವಣಾ ವೇಳಾಪಟ್ಟಿಯಂತೆ ನವೆಂಬರ್ 11 ರಂದು ಚುನಾವಣಾ ಅಧಿಸೂಚನೆ ಹೊರಡಿಸಿ, ನಾಮಪತ್ರ ಸ್ವೀಕಾರ ಮಾಡಲಾಗುವುದು, ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ನವೆಂಬರ್ 18 ಕೊನೆಯ ದಿನವಾಗಿದೆ. ನವೆಂಬರ್ 19 ರಂದು ನಾಮಪತ್ರಗಳ ಪರಿಶೀಲನಾ ಕಾರ್ಯ ನಡೆಯಲಿದೆ. ನಾಮಪತ್ರಗಳನ್ನು ಹಿಂಪಡೆಯಲು ನವೆಂಬರ್ 21 ರಂದು ಕೊನೆಯ ದಿನವಾಗಿದೆ. ಡಿಸೆಂಬರ್ 5 ಮತದಾನ ನಡೆಯಲಿದೆ. ಡಿಸೆಂಬರ್ 9 ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಮಾದರಿ ನೀತಿ ಸಂಹಿತೆಯು ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೂ ಜಾರಿಯಲ್ಲಿರುತ್ತದೆ ಎಂದು ಮಾಹಿತಿ ನೀಡಿದರು.
ಹೊಸಕೋಟೆ ಮಿನಿ ವಿಧಾನಸೌಧ ಕಟ್ಟಡದಲ್ಲಿರುವ ತಾಲ್ಲೂಕು ಕಚೇರಿಯು ಜಿಲ್ಲಾ ಚುನಾವಣಾಧಿಕಾರಿಯವರ ಕೇಂದ್ರ ಕಚೇರಿ ಕಾರ್ಯ ಸ್ಥಳವಾಗಿದೆ. ನಾಮಪತ್ರ ಇತ್ಯಾದಿ ಪ್ರಕ್ರಿಯೆಗಳು ಮಿನಿ ವಿಧಾನಸೌಧದ ಕಟ್ಟಡದಲ್ಲಿ ನಡೆಯಲಿದೆ ಎಂದರು.
ಅರ್ಹತಾ ದಿನಾಂಕದಂತೆ ಈಗಾಗಲೇ ಪ್ರಕಟಿಸಲಾಗಿರುವ ಕಳೆದ ಲೋಕಸಭಾ ಚುನಾವಣೆಯ ಸಮಯದಲ್ಲಿ ಬಳಸಲಾದ ಮತದಾರರ ಪಟ್ಟಿಗಳ ಆಧಾರದ ಮೇಲೆ ಉಪ ಚುನಾವಣೆ ನಡೆಯಲಿದೆ.
ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟಾರೆ 212784 ಮತದಾರರಿದ್ದು, ಅದರಲ್ಲಿ 107766 ಪುರುಷ ಮತದಾರರು, 104956 ಮಹಿಳಾ ಮತದಾರರು ಹಾಗೂ 26 ಇತರೆ ಮತದಾರರಿದ್ದಾರೆ ಎಂದರಲ್ಲದೇ, ಬಿ.ಇ.ಎಲ್ ಸಂಸ್ಥೆಯ ಎಂ೩ (ಒ೩)ಮಾದರಿಯ ಇ.ವಿ.ಎಂ ಗಳನ್ನು ಬಳಸಿ ಉಪ ಚುನಾವಣೆ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.
ಈ ವೇಳೆಯಲ್ಲಿ ಅಪರ ಜಿಲ್ಲಾಧಿಕಾರಿ ಜಗದೀಶ್ ಕೆ.ನಾಯಕ್, ಜಿಲ್ಲಾಧಿಕಾರಿ ಕಚೇರಿಯ ಸಹಾಯಕ ತಹಶೀಲ್ದಾರ್ ನರಸಿಂಹಮೂರ್ತಿ, ಡಿಡಿಪಿಐ ಕೃಷ್ಣಮೂರ್ತಿ, ಜೆಎಚ್ಎಂ ಮಂಜುನಾಥ್, ಮತ್ತಿತರರು ಇದ್ದರು.