ಬೆಂಗಳೂರು, ಡಿ. 19: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯದಲ್ಲೂ ಕೂಡ ಪ್ರತಿಭಟನೆ, ಮುಷ್ಕರಗಳು ನಡೆಯುತ್ತಿವೆ ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇಂದಿನಿಂದ 3 ದಿನಗಳ ಕಾಲ ಸೆಕ್ಷನ್ 144 ಜಾರಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೈಗೊಂಡಿರುವ ಭದ್ರತಾ ಕ್ರಮಗಳ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಮುಖ್ಯಮಂತ್ರಿಗಳು ಬೆಳ್ಳಂಬೆಳಗ್ಗೆ ಮಹತ್ವದ ಸಭೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಿದರು.
ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ವೇಳೆ ಪೊಲೀಸ್ ಮಹಾನಿರ್ದೇಶಕರಾದ ನೀಲಮಣಿರಾಜು ಹಾಗೂ ಪೊಲೀಸ್ ಹಿರಿಯ ಅಧಿಕಾರಿ ಕಮಲ್ ಪಂತ್ ಉಪಸ್ಥಿತರಿದ್ದರು.
ಸಭೆ ಬಳಿಕ ಮಾತನಾಡಿದ ಸಿಎಂ ಸಿಎಂ ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಅಲ್ಪಸಂಖ್ಯಾತರಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ. ಯಾರೂ ಸಹ ಆತಂಕಪಡಬೇಕಿಲ್ಲ. ಸಿಎಎ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂದೆ ಕಾಂಗ್ರೆಸ್ ಪಕ್ಷದ ಕೈವಾಡವಿದೆ. ಯು. ಟಿಖಾದರ್ ಅಂತಹವರು ಜನರನ್ನು ಪ್ರಚೋದಿಸುವ ಕೆಲಸ ಮಾಡುತ್ತಿದ್ದಾರೆ. ಇಂತಹ ಪ್ರಚೋದನೆಗೆ ಜನ ತಲೆಕೆಡಸಿಕೊಳ್ಳಬಾರದು. ಈಗಾಗಲೇ ನಿಷೇಧಾಜ್ಙೆ ಜಾರಿಗೊಳಿಸಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಯಾವುದೇ ಮೆರವಣಿಗೆ ಹಾಗೂ ಪ್ರತಿಭಟನೆಗೆ ಅವಕಾಶ ನೀಡಿಲ್ಲ ಎಂದರು.
ಇನ್ನು ಅಧಿಕಾರಿಗೆ ಖಡಕ್ ಎಚ್ಚರಿಕೆ ನೀಡಿದ ಅವರು ಸಾರ್ವಜನಿಕರಿಗೆ ತೊಂದರೆ ಆಗದಂತೆ ನಿಗಾವಹಿಸಲು ಪ್ರತಿಭಟನಾಕಾರ ಮೇಲೆ ಹದ್ದಿನ ಕಣ್ಣಿಡ ಬೇಕು. ಪ್ರತಿಭಟನೆ ನೆಪದಲ್ಲಿ ಶಾಂತಿ ಕದಡುವ ಸಾಧ್ಯತೆಯಿದ್ದು ಎಚ್ಚರ ವಹಿಸಬೇಕು. ಅಲ್ಲದೇ ಈ ಬಗ್ಗೆ ನಿತ್ಯ ಎರಡು ಬಾರಿ ವರದಿ ಕೊಡಬೇಕು ಎಂದರು.