ಮೈತ್ರಿ ಸರ್ಕಾರ ಸುಭದ್ರವಾಗಿರುತ್ತದೆ: ಮಾಜಿ ಸಚಿವ ರಾಮಲಿಂಗಾರೆಡ್ಡಿ

ಮೈತ್ರಿ ಸರ್ಕಾರ ಸುಭದ್ರವಾಗಿರುತ್ತದೆ: ಮಾಜಿ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಸುಭದ್ರವಾಗಿರುತ್ತದೆ. ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಇದೇ 18ರಂದು ನಗರದ ಅರಮನೆ ಮೈದಾನದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ನೇಮಕವಾಗಿರುವ ಎಚ್.ಕೆ.ಪಾಟೀಲ್ ಅವರ ಪದಗ್ರಹಣ ಸಮಾರಂಭದ ಅಂಗವಾಗಿ ಬೆಂಗಳೂರು ನಗರ ಜಿಲ್ಲಾ ಪ್ರಚಾರ ಸಮಿತಿ ವತಿಯಿಂದ ಏರ್ಪಡಿಸಿದ್ದ ಪೂರ್ವಭಾವಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಒಗ್ಗಟ್ಟಾಗಿ ಹೋರಾಟ ಮಾಡಿದರೆ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಸಾಧ್ಯವಿದೆ.

ಲೋಕಸಭೆ ಚುನಾವಣೆಯಲ್ಲಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಬೆಂಗಳೂರು ಮಹಾನಗರದಲ್ಲಿ ಮೂರು ಸ್ಥಾನಗಳನ್ನು ಗೆಲ್ಲಲು ಪಕ್ಷವನ್ನು ಬಲವಾಗಿ ಸಂಘಟಿಸಬೇಕು ಎಂದು ಅವರು ಹೇಳಿದರು.

ಕೇಂದ್ರ ಸರ್ಕಾರದ ಜನವಿರೋಧಿ, ರೈತ ವಿರೋಧಿ, ಕಾರ್ಮಿಕ ವಿರೋಧಿ ಧೋರಣೆಗಳನ್ನು ಜನರ ಬಳಿ ಕೊಂಡೊಯ್ಯಬೇಕು. ಅದೇ ರೀತಿ ನಮ್ಮ ಸರ್ಕಾರದ ಜನಪರ ಕಾರ್ಯಕ್ರಮಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಕಾರ್ಯಕರ್ತರು ಹೆಚ್ಚು ಶ್ರಮ ವಹಿಸಿ ಕೆಲಸ ಮಾಡಬೇಕು. ದೇಶದಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು. ರಾಹುಲ್‍ಗಾಂಧಿ ಅವರನ್ನು ಪ್ರಧಾನಿ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ನಂಜಯ್ಯನಮಠ್, ಸಮಿತಿ ಅಧ್ಯಕ್ಷ ಜಿ.ಜನಾರ್ದನ್, ಎಸ್.ಮನೋಹರ್, ಸಲೀಂ, ರಾಮಕೃಷ್ಣ, ಆನಂದ್, ಹೇಮರಾಜ್ ಮುಂತಾದವರು ಪಾಲ್ಗೊಂಡಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos