ಟಿಕೆಟ್ ಘೋಷಣೆ ಬೆನ್ನಲ್ಲೇ ಬಿಜೆಪಿ ನಾಯಕರ ಅಸಮಧಾನ

ಟಿಕೆಟ್ ಘೋಷಣೆ ಬೆನ್ನಲ್ಲೇ ಬಿಜೆಪಿ ನಾಯಕರ ಅಸಮಧಾನ

ಬೆಂಗಳೂರು: ಲೋಕಸಭೆ ಚುನಾವಣೆಗೆ ಕರ್ನಾಟಕದ 20 ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ನೆನ್ನೆ ರಾತ್ರಿ ಘೋಷಣೆ ಮಾಡಿದೆ. ಟಿಕೆಟ್ ವಂಚಿತರ ಆಕ್ರೋಶ ಸ್ಫೋಟಗೊಂಡಿದೆ. ಟಿಕೆಟ್ ಕೈ ತಪ್ಪಿಸಿಕೊಂಡವರು, ಟಿಕೆಟ್ ಮೇಲೆ ಕಣ್ಣಿಟ್ಟು ಎಲ್ಲ ರೀತಿಯಲ್ಲಿ ಸಜ್ಜಾಗಿದ್ದವರು ಅಸಮಾಧಾನಗೊಂಡಿದ್ದಾರೆ. ಸ್ಥಳೀಯ ನಾಯಕರ ಅಸಮಾಧಾನದಿಂದ ಪಕ್ಷಕ್ಕೆ ಮುಳುವಾಗುವ ಆತಂಕ ಎದುರಾಗಿದೆ.

ಸುಮಾರು 10 ಕ್ಕೂ ಹೆಚ್ಚು ಲೋಕಸಭಾ ಕ್ಷೇತ್ರಗಳಲ್ಲಿ ಟಿಕೆಟ್ ಸಿಗದಿರುವವರು ಸ್ವಪಕ್ಷೀಯರ ವಿರುದ್ಧವೇ ಬಂಡಾಯ ಸಾರಿದ್ದು, ಮುಂದಿನ ರಾಜಕೀಯ ಬೆಳವಣಿಗೆಗಳ ಕುರಿತಂತೆ ಆಪ್ತರ ಸಭೆ ಕರೆಯುವ ಮೂಲಕ ಅಧಿಕೃತ ಅಭ್ಯರ್ಥಿಗೆ ಸೆಡ್ಡು ಹೊಡೆಯಲು ಮುಂದಾಗಿದ್ದಾರೆ.

ವಿಶೇಷವಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ರಾಘವೇಂದ್ರಗೆ ಟಿಕೆಟ್ ಘೋಷಣೆಯಾಗಿದೆ. ಹಾವೇರಿಯಿಂದ ತಮ್ಮ ಪುತ್ರನಿಗೆ ಟಿಕೆಟ್ ಸಿಗಬಹುದು ಎಂದು ನಿರೀಕ್ಷಿಸಿದ್ದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮೊದಲ ಬಾರಿಗೆ ಪಕ್ಷದ ವಿರುದ್ಧವೇ ಕೆಂಡ ಕಾರಿದ್ದಾರೆ.

ಹಾವೇರಿಯಿಂದ ತಮ್ಮ ಪುತ್ರ ಕೆ.ಇ.ಕಾಂತೇಶ್ಗೆ ಟಿಕೆಟ್ ಕೈತಪ್ಪುತ್ತಿದ್ದಂತೆ ನಾಳೆ ಶಿವಮೊಗ್ಗದಲ್ಲಿ ತಮ್ಮ ಬೆಂಬಲಿಗರ ಸಭೆ ಕರೆದಿರುವ ಈಶ್ವರಪ್ಪ ರಾಘವೇಂದ್ರರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇವೆಂದು ಬೆದರಿಕೆ ಹಾಕಿದ್ದಾರೆ. ಇದು ಬಿಜೆಪಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ.

ಶಿವಮೊಗ್ಗಕ್ಕೆ ಹೊಂದಿಕೊಂಡಿರುವ ಪಕ್ಕದ ದಾವಣಗೆರೆಯಲ್ಲೂ ಭಿನ್ನಮತ ಜೋರಾಗಿದೆ. ಅಚ್ಚರಿ ಬೆಳವಣಿಗೆ ಎಂಬಂತೆ ಹಾಲಿ ಸಂಸದ ಜಿ.ಎಂ.ಸಿದ್ದೇಶ್ಗೆ ಟಿಕೆಟ್ ಕೈತಪ್ಪಿತು. ಆದರೆ ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ್ಗೆ ಟಿಕೆಟ್ ನೀಡಿರುವುದು ಹಲವರ ಕಣ್ಣು ಕೆಂಪಾಗುವಂತೆ ಮಾಡಿದೆ.

ಬೆಂಗಳೂರು ಉತ್ತರದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡಿರುವುದಕ್ಕೂ ವಿರೋಧ ವ್ಯಕ್ತವಾಗಿದೆ. ಸ್ವತಃ ಬಿಜೆಪಿ ಕಾರ್ಯಕರ್ತರೇ ಗೋ ಶೋಭಕ್ಕ ಗೋ ಅಭಿಯಾನವನ್ನು ಆರಂಭಿಸಿದ್ದಾರೆ. ಬರುವ ದಿನಗಳಲ್ಲಿ ಇದು ಬಿಜೆಪಿಗೆ ಬಿಸಿತುಪ್ಪವಾಗುವುದರಲ್ಲಿ ಅನುಮಾನವೇ ಇಲ್ಲ.

ಚುನಾವಣೆಗೂ ಮುನ್ನವೇ ರಾಜ್ಯದ ಗಮನ ಸೆಳೆದಿದ್ದ ಉಡುಪಿ, ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಇಬ್ಬರ ಜಗಳ ಮೂರನೆಯವರಿಗೆ ಲಾಭವಾಗಿದೆ. ಇದೀಗ ಅಚ್ಚರಿಯೆಂಬಂತೆ ವಿಧಾನಪರಿಷತ್ನ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸಪೂಜಾರಿಗೆ ಟಿಕೆಟ್ ಘೋಷಿಸಲಾಗಿದೆ.

ಅದೇ ರೀತಿ ಕೊಪ್ಪಳದಲ್ಲಿ ಕರಡಿ ಸಂಗಣ್ಣರಿಗೆ ಟಿಕೆಟ್ ತಪ್ಪಿರುವುದರಿಂದ ಅವರು ಕಾಂಗ್ರೆಸ್ ಕಡೆ ಮುಖ ಮಾಡುವ ಸಾಧ್ಯತೆಯಿದೆ. ಮಾಜಿ ಸಚಿವ ಪ್ರಭು ಚೌಹಾಣ್ ಅವರು ಖೂಬಾ ಅವರಿಗೆ ಟಿಕೆಟ್ ನೀಡದಂತೆ ಪ್ರಬಲ ವಿರೋಧ ವ್ಯಕ್ತಪಡಿಸಿದ್ದರು. ಸಭೆಯಲ್ಲೂ ನೇರ ವಾಗ್ದಾಳಿ ನಡೆಸಿದ್ದರು. ಇದೀಗ ಮತ್ತೆ ಖೂಬಾಗೆ ಟಿಕೆಟ್ ಘೋಷಣೆಯಾಗಿದ್ದು, ಕ್ಷೇತ್ರದಲ್ಲಿ ಅಸಮಾಧಾನ ಪಕ್ಷಕ್ಕೆ ಮುಳುವಾಗುವ ಆತಂಕ ಎದುರಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos