ಬೆಂಗಳೂರು: ರಾಜ್ಯದಲ್ಲಿ ವಿಪರೀತ ಮಳೆಯಾಗುತ್ತಿರುವುದರಿಂದ ಮುನ್ನೆಚ್ಚರಿಕೆಯ ಕ್ರಮವಾಗಿ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ತಕ್ಷಣ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುವಂತೆ ಜಿಲ್ಲಾ ಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.
ಮಳೆಯಿಂದ ಆಗಿರುವ ಅನಾಹುತದ ಬಗ್ಗೆ ಇಂದು (ಬುಧವಾರ ಮೇ 28) ರಂದು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಆದೇಶಿಸಿದರು. ಇದನ್ನೂ ಓದಿ: ಮಾಸ್ಕ್ ಕಡ್ಡಾಯ ಮಾಡುವ ಅವಶ್ಯಕತೆ ಸದ್ಯಕ್ಕೆ ಇಲ್ಲ: ಶರಣ್ ಪ್ರಕಾಶ್ ಪಾಟೀಲ್
ಜೋರು ಮಳೆಯಿಂದ ಹಾನಿಗೆ ಒಳಗಾಗಿರುವ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ ಪರಿಸ್ಥಿತಿಯನ್ನು ಸಮಗ್ರವಾಗಿ ಅವಲೋಕಿಸುವಂತೆ ಜಿಲ್ಲಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.
ಹಾಗೂ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಈ ಬಗ್ಗೆ ಕಟ್ಟೆಚ್ಚರ ಮತ್ತು ತೀವ್ರ ನಿಗಾ ವಹಿಸಿ ತಕ್ಷಣ ತಕ್ಷಣ ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ನಿರ್ವಹಿಸಲು ಸೂಚನೆ ನೀಡಿದ್ದಾರೆ.
ಈ ಬಗ್ಗೆ ಸಮಗ್ರ ಅವಲೋಕನ ನಡೆಸಲು, ಮೇ 30, 31 ರಂದು DC, CEO ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯನ್ನು ಕರೆಯುವಂತೆ ಮುಖ್ಯಮಂತ್ರಿಗಳು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದ್ದಾರೆ.