ಹಣತೆ ಹಚ್ಚಿ ಕತ್ತಲಿನಿಂದ ಬೆಳಕಿನಡೆಗೆ ದೀಪಾವಳಿ

ಹಣತೆ ಹಚ್ಚಿ ಕತ್ತಲಿನಿಂದ ಬೆಳಕಿನಡೆಗೆ ದೀಪಾವಳಿ

ಬೆಂಗಳೂರು, ಅ. 26: ಹಬ್ಬದ ಆಚರಣೆಯ ಹಿಂದೆ ಹಲವು ಪುರಾಣ ಕಾಲದ ಬೆಸುಗೆ, ಸಂಪ್ರದಾಯ, ಸಂಸ್ಕೃತಿ, ಇತಿಹಾಸ ಮಿಳಿತಗೊಂಡಿರುವುದು ಕಂಡು ಬರುತ್ತದೆ. ಹಣತೆ ಹಚ್ಚುತ್ತೇನೆ, ಕತ್ತಲನು ಗೆದ್ದು ನಿಲ್ಲುತ್ತೇನೆಂಬ ಜಿದ್ದಿನಿಂದಲ್ಲ! ದೀಪಾವಳಿ ಹಬ್ಬದ ಮೊದಲಿಗೆ ಎಣ್ಣೆ ಸ್ನಾನ ಮಾಡುವ ಸಂಪ್ರದಾಯವೂ ಇದೆ.

ಸಮುದ್ರಮಥನದ ಸಮಯದಲ್ಲಿ ಶ್ರೀವಿಷ್ಣು ಅಮೃತಕಲಶದೊಡನೆ ಧನ್ವಂತರಿಯಾಗಿ ಅವತಾರವೆತ್ತಿದ ಈ ದಿನ ತುಂಬುವ ಸ್ನಾನದ ನೀರಿನಲ್ಲಿ ಗಂಗೆಯೂ, ಎಣ್ಣೆಯಲ್ಲಿ ಧನಲಕ್ಷ್ಮೀಯೂ ಇರುತ್ತಾಳೆಂಬುದು ನಂಬಿಕೆ. ಈ ನೀರಿನಿಂದ ಸ್ನಾನಮಾಡಿದರೆ ಆಯುರಾರೋಗ್ಯ ಆಯಸ್ಸು ವೃದ್ಧಿಸುವುದೆಂದೂ ಮತ್ತು ಸಕಲ ಪಾಪಗಳೂ ನಿವಾರಣೆಯಾಗುವುದೆಂಬ ನಂಬಿಕೆಯಿದೆ.

ನರಕಾಸುರನನ್ನು ಕೊಂದ ಪಾಪ ಪರಿಹಾರಕ್ಕಾಗಿ ಶ್ರೀಕೃಷ್ಣ ಕೂಡ ಎಣ್ಣೆಸ್ನಾನ ಶಾಸ್ತ್ರ ಮಾಡಿದ್ದನು ಎಂದು ಹೇಳಲಾಗುತ್ತದೆ. ಬೆಳಕಿನ ಉತ್ಸವ ದೀಪಾವಳಿ ಶುಭತರಲಿ ಹಬ್ಬದ ಮೊದಲ ದಿನ ನರಕಚತುದರ್ಶಿಯಾಗಿದ್ದು, ನರಕ ಚತುರ್ದಶಿಯ ಕೇಂದ್ರಬಿಂದುವೇ ನರಕಾಸುರ. ಮಹಾವಿಷ್ಣು ತನ್ನ ವರಾಹಾವತಾರದಲ್ಲಿದ್ದಾಗ ಶರೀರದಿಂದ ಒಂದು ತೊಟ್ಟು ಬೆವರು ಭೂಮಿಗೆ ಬೀಳಲಾಗಿ ಭೂದೇವಿಯಲ್ಲಿ ನರಕಾಸುರ ಜನಿಸುತ್ತಾನೆ.

ಭೌಮಾಸುರ, ಭೂಮಿಪುತ್ರ ಎಂಬ ಹೆಸರುಗಳೂ ಉಂಟು. ಭೂದೇವಿ ವಿಷ್ಣುವನ್ನು ಬೇಡಿ ತನ್ನ ಮಗ ನರಕಾಸುರನಿಗೆ ವೈಷ್ಣವಾಸ್ತ್ರವನ್ನು ವರವಾಗಿ ಕೊಡಿಸುತ್ತಾಳೆ. ಇದರಿಂದ ಬಲಿಷ್ಠನಾದ ನರಕಾಸುರ ಲೋಕಕಂಠಕನಾಗುತ್ತಾನೆ. ಇಂದ್ರ ಮತ್ತು ಅವನ ತಾಯಿ ಅಧಿತಿಯನ್ನೂ ಬಿಡದೆ ಕಾಡತೊಡಗಿದಾಗ ಇಂದ್ರ, ಶ್ರೀಕೃಷ್ಣನ ಮೊರೆಹೋಗುತ್ತಾನೆ. ನರಕಾಸುರ ವಧೆ ನರಕಾಸುರನ ದುಷ್ಟತನ ತಾಯಿ ಭೂದೇವಿಗೂ ಸಹಿಸದಾದಾಗ ದುಷ್ಟ ಮಗನನ್ನು ಕೊಂದು ಲೋಕವನ್ನು ಕಾಪಾಡುವಂತೆ ಭೂದೇವಿ ಶ್ರೀಕೃಷ್ಣನಿಗೆ ಹೇಳಿದಾಗ, ಅಶ್ವಯುಜಕೃಷ್ಣ ಚತುರ್ದಶಿಯ ಕಗ್ಗತ್ತಲಿನಲ್ಲಿ ಶ್ರೀಕೃಷ್ಣನು ನರಕಾಸುರನನ್ನು ಸಂಹರಿಸುತ್ತಾನೆ.

ಆ ದಿನವೇ ನರಕ ಚತುರ್ದಶಿ. ದುಷ್ಟ ಸಂಹಾರದ ಸಂಕೇತವಾಗಿ  ಪಟಾಕಿ ಸಿಡಿಸಿ ಸಂಭ್ರಮಿಸಿ ವಿಜಯದ ನಗೆಯಲ್ಲಿ ಎಲ್ಲರೂ ಖುಷಿಪಡುತ್ತಾರೆ. ನರಕಾಸುರನನ್ನು ಕೊಂದು ಬಂಧನದಲ್ಲಿದ್ದ ಸಾವಿರಾರು ಕನ್ಯೆಯರನ್ನು ಶ್ರೀಕೃಷ್ಣ ಬಂಧಮುಕ್ತಗೊಳಿಸಿದ್ದರಿಂದಾಗಿ ಕನ್ಯಾಸೆರೆ ಬಿಡಿಸಿದ ಶ್ರೀಕೃಷ್ಣ ಸ್ವರೂಪಿಯಾದ ಅಳಿಯಂದಿರನ್ನು ಕನ್ಯಾಪಿತೃಗಳು ಹಬ್ಬದಂದು ತಮ್ಮ ಮನೆಗೆ ಆಹ್ವಾನಿಸಿ ಆಧರಿಸಿ ಉಪಚರಿಸುವ ಸಂಪ್ರದಾಯವನ್ನು ಕೂಡ ಕಾಣಬಹುದಾಗಿದೆ.

ಅಮಾವಾಸ್ಯೆಯಂದು ಲಕ್ಷ್ಮಿ ಪೂಜೆ ನರಕ ಚತುರ್ದಶಿಯ ಮಾರನೆಯ ದಿನ ದೀಪಾವಳಿ ಅಮಾವಾಸ್ಯೆಯಾಗಿದ್ದು, ಲಕ್ಷ್ಮಿಪೂಜೆ ಮಾಡಲಾಗುತ್ತದೆ. ಮಹಾವಿಷ್ಣುವಿನ ಪತ್ನಿ ಮಹಾಲಕ್ಷ್ಮಿಯನ್ನು ಆರಾಧಿಸುವ ಹಬ್ಬವೇ ಧನಲಕ್ಷ್ಮೀ ಪೂಜೆ. ಸಮುದ್ರ ಮಥನದಿಂದ ಲಕ್ಷ್ಮೀ ಉದಯಿಸಿದ ದಿನವೂ ಹೌದು.

ವ್ಯಾಪಾರಿಗಳಿಗೆ ದೀಪ ಲಕ್ಷ್ಮೀ ಬೆಳಗಿ ಧನಲಕ್ಷ್ಮೀ ಬರುವ ಭಾಗ್ಯದ ದಿನವೇ ಆಗಿದೆ. ವ್ಯಾಪಾರ ವಹಿವಾಟಿನ ವಾಣಿಜ್ಯದ ನೂತನ ವರ್ಷ ಉದಯಿಸುವುದೇ ಈ ದಿನ. ಅತ್ಯಂತ ಸಂತೋಷದಿಂದ ಕಾರ್ತಿಕ ಮಾಸದ ಆರಂಭದ ಅಮಾವಾಸ್ಯೆಯ ಮಹಾರಾತ್ರಿಯಲ್ಲಿ ಮಹಾಲಕ್ಷ್ಮೀಗೆ ಮಹದಾನಂದದಿಂದ ದೀಪಾರಾಧನೆಯೊಡನೆ ಲಕ್ಷ್ಮೀಪೂಜೆಯನ್ನು ಮಾಡುತ್ತಾರೆ.

ಬಲಿಪಾಡ್ಯಮಿ ಸಂಭ್ರಮ ಹಬ್ಬದಲ್ಲಿ ಮೂರನೆಯ ದಿನವನ್ನು ಬಲಿಪಾಡ್ಯಮಿಯಾಗಿ ಆಚರಿಸಲಾಗುತ್ತಿದೆ. ಬಲಿಚಕ್ರವರ್ತಿ ಭೂಲೋಕ ಸಂಚಾರಕ್ಕೆ ಬರುತ್ತಾನೆ ಎಂಬ ನಂಬಿಕೆಯೂ ಇದೆ. ಬಲೀಂದ್ರಪೂಜೆಯೂ ನಡೆಯುತ್ತದೆ. ಪೌರಾಣಿಕ ಕಥೆಯ ಪ್ರಕಾರ ಮಹಾವಿಷ್ಣುಭಕ್ತ, ದಾನಶೂರ ದೈತ್ಯರಾಜ ಬಲಿ ಚಕ್ರವರ್ತಿಯ ಬಳಿಗೆ ವಾಮನ ಅವತಾರಿಯಾಗಿ ಬಂದ ಮಹಾವಿಷ್ಣು, ಬಲಿಯಿಂದ ಮೂರು ಹೆಜ್ಜೆ ಊರುವಷ್ಟು ಭೂಮಿಯನ್ನು ದಾನವಾಗಿ ಪಡೆದು ಎರಡು ಹೆಜ್ಜೆಗಳಲ್ಲಿ ಆಕಾಶ-ಭೂಮಿಗಳನ್ನು ಅಳೆದುಕೊಂಡು ತ್ರಿವಿಕ್ರಮನಾಗಿ ಬೆಳೆದು ಮೂರನೇ ಹೆಜ್ಜೆಯನ್ನು ಬಲಿಯ ಕೋರಿಕೆಯಂತೆ ತಲೆಯ ಮೇಲಿಟ್ಟು ಬಲಿಚಕ್ರವರ್ತಿಯನ್ನು ಪಾತಾಳಕ್ಕೆ ತುಳಿದುಬಿಡುತ್ತಾನೆ.

ಬಲಿಯ ಭಕ್ತಿಯನ್ನು ಮತ್ತು ದಾನಶೀಲಗುಣವನ್ನು ಮೆಚ್ಚಿದ ವಿಷ್ಣು ಪ್ರತಿವರ್ಷ ಒಂದು ದಿನ ಅವನ ಹೆಸರಿನಲ್ಲಿ ಪೂಜೆ ನಡೆಯುವಂತೆ ವರ ನೀಡುತ್ತಾನೆ. ಆ ರೀತಿ ಆಚರಿಸಲ್ಪಡುವ ದಿನವೇ ಬಲಿಪಾಡ್ಯಮಿ. ಬಲಿ ಚಕ್ರವರ್ತಿ ಭೂಲೋಕ ಸಂಚಾರಕ್ಕೆ ಬರುತ್ತಾನೆಂಬ ನಂಬಿಕೆಯಲ್ಲಿ ಬಲೀಂದ್ರಪೂಜೆ ನಡೆಯುತ್ತದೆ. ಗೋವರ್ಧನಗಿರಿ ಎತ್ತಿದ ದಿನ ಭಾಗವತ ಪುರಾಣದ ಪ್ರಕಾರ ಕಾರ್ತಿಕ ಶುಕ್ಲಪಾಡ್ಯಮಿ ಶ್ರೀಕೃಷ್ಣನು ಇಂದ್ರನನ್ನು ಸೋಲಿಸಿದ ದಿನವೂ ಹೌದು. ಇಂದ್ರನ ದಾಳಿಯಿಂದ ಗೋಸಮೂಹವನ್ನು ರಕ್ಷಿಸಲು ಶ್ರೀಕೃಷ್ಣನು ಗೋವರ್ಧನ ಗಿರಿಯನ್ನೆತ್ತಿದ ದಿನವಿದು. ಗೋಪೂಜೆ ಮತ್ತು ಗೋವರ್ಧನಪೂಜೆಯನ್ನು ಆಚರಿಸಲಾಗುತ್ತದೆ.

ಕೆಲವೆಡೆ ರೈತರು ಹಟ್ಟಿಹಬ್ಬವೆಂದು ಆಚರಿಸುತ್ತಾರೆ. ಆಯೋಧ್ಯೆಗೆ ಮರಳಿದ ಶ್ರೀರಾಮ ರಾಮಾಯಣದ ಪ್ರಕಾರ ತ್ರೇತಾಯುಗದಲ್ಲಿ ಶ್ರೀರಾಮ ವಿಜಯದಶಮಿಯಂದು ರಾವಣನನ್ನು ಕೊಂದು 14 ವರ್ಷಗಳ ವನವಾಸ ಮುಗಿಸಿ ಆಯೋಧ್ಯೆಗೆ ಮರಳಿದಾಗ ಜನರು ಸಾಲುದೀಪಗಳನ್ನು ಹಚ್ಚಿ ಸ್ವಾಗತಿಸಿ ದೀಪಾವಳಿಯನ್ನು ಆಚರಿಸಿದರಂತೆ. ಜೈನ ಪುರಾಣದ ಪ್ರಕಾರ ಭಗವಾನ್ ಮಹಾವೀರ ನಿರ್ವಾಣ ಹೊಂದಿದ್ದು ದೀಪಾವಳಿಯ ದಿನದಂದೇ. ಸಿಖ್ ಸಂಪ್ರದಾಯದಂತೆ ಗುರುಹರಗೋವಿಂದ್ ಜೀ ಮತ್ತು ಇತರ 25 ಹಿಂದೂ ಮಹಾರಾಜರುಗಳು ಮೊಘಲರಿಂದ ಬಂಧಮುಕ್ತಿ ಹೊಂದಿದ ದಿನ ಕೂಡ ದೀಪಾವಳಿ ಆಚರಿಸಲಾಗುತ್ತದೆ.

 

 

ಫ್ರೆಶ್ ನ್ಯೂಸ್

Latest Posts

Featured Videos