ಕೇಂದ್ರ ಸರ್ಕಾರದ ವಿರುದ್ದ ನಮ್ಮ ಹೋರಾಟ ಮುಂದುವರೆಯುತ್ತೆ: ಸಿಎಂ

ಕೇಂದ್ರ ಸರ್ಕಾರದ ವಿರುದ್ದ ನಮ್ಮ ಹೋರಾಟ ಮುಂದುವರೆಯುತ್ತೆ: ಸಿಎಂ

ಬೆಂಗಳೂರು: ಕೇಂದ್ರ ಸರ್ಕಾರ ನೀಡಿರುವ ಬರಪರಿಹಾರದ ಹಣ ಸಾಲುವುದಿಲ್ಲ. ಹೀಗಾಗಿ ಬಾಕಿ ಪರಿಹಾರಕ್ಕಾಗಿ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿ ಕೇಂದ್ರ ಸರ್ಕಾರದ ವಿರುದ್ದ ಹರಿಹಾಯ್ದಿರುವ ಸಿಎಂ ಸಿದ್ದರಾಮಯ್ಯ,  ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿ ಕರ್ನಾಟಕಕ್ಕೆ ಸ್ವಲ್ಪವಾದರೂ ಬರ ಪರಿಹಾರ ಕೊಡಿಸಿದ ಸುಪ್ರೀಂ ಕೋರ್ಟ್ ಗೆ ಧನ್ಯವಾದಗಳು ಎಂದು ಹೇಳಿದರು.

ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ನಾವು 13-9-2023ರಂದು ಘೋಷಿಸಿದ್ದೆವು. ಈಗ ಏಳು ತಿಂಗಳುಗಳಾಗುತ್ತಾ ಬಂತು. 48 ಲಕ್ಷ ಹೆಕ್ಟೇರ್ ನಲ್ಲಿ ಬೆಳೆ ಹಾನಿಯಾಗಿದೆ. ಇದರಿಂದಾಗಿ 35,162 ಕೋಟಿ ರೂಪಾಯಿಗಳಷ್ಟು ನಷ್ಟವಾಗಿದೆ. ಕೇಂದ್ರ ಸರ್ಕಾರದಿಂದ ನಾವು ಪರಿಹಾರ ಕೇಳಿರುವುದು ಹೆಚ್ಚು ಕಡಿಮೆ ಅದರ ಅರ್ಧದಷ್ಟು ಅಂದರೆ ರೂ.18,171 ಕೋಟಿ. ಉಳಿದ ಹಣವನ್ನು ರಾಜ್ಯ ಸರ್ಕಾರ ತನ್ನ ಸಂಪನ್ಮೂಲದಿಂದಲೇ ಭರಿಸುತ್ತಿದೆ. ಈಗ ಬಿಡುಗಡೆಯಾಗಿರುವುದು ರೂ. 3,454 ಕೋಟಿ ಮಾತ್ರ. ಉಳಿದ ಪರಿಹಾರಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಕರ್ನಾಟಕದ ಮೇಲೆ ಕಾಳಜಿಯಿಂದ ಈ ಬರ ಪರಿಹಾರ ನೀಡಿಲ್ಲ. ನಾವು ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿ ನಮ್ಮಲ್ಲಿನ ಬರಸ್ಥಿತಿಯನ್ನು ಮನವರಿಕೆ ಮಾಡಿ ಕೊಟ್ಟಿದ್ದೆವು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಗೆ ರಾಜಕೀಯ ದುರುದ್ದೇಶದಿಂದ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಮನವರಿಕೆಯಾಗಿದೆ. ನ್ಯಾಯಾಲಯ ವಿಚಾರಣೆ ವೇಳೆ ಚಾಟಿ ಬೀಸಿದ ನಂತರ ವಾರದ ಅವಧಿಯೊಳಗೆ ಬರ ಪರಿಹಾರ ನೀಡಲಾಗುವುದು ಎಂದು ಸುಪ್ರೀಂ ಕೋರ್ಟ್ ಗೆ  ವಚನ ನೀಡಿತ್ತು. ಅದನ್ನು ಪಾಲಿಸಲಿಕ್ಕಾಗಿ ಒಲ್ಲದ ಮನಸ್ಸಿನಿಂದ ಈ ಪರಿಹಾರ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಈ ಬರ ಪರಿಹಾರದ ಹಿಂದಿನ ಕಾರಣಗಳೇನೇ ಇರಲಿ, ನೀಡಿರುವ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಸಾಧ್ಯವಾದಷ್ಟು ಶೀಘ್ರ ಬಾಕಿ ಪರಿಹಾರದ ಹಣವನ್ನು ಬಿಡುಗಡೆಗೊಳಿಸಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಒತ್ತಾಯಿಸುತ್ತಿದ್ದೇನೆ. ಎಂದು ಮನವಿ ಮಾಡಿದರು.

ಫ್ರೆಶ್ ನ್ಯೂಸ್

Latest Posts

Featured Videos