ಬೆಂಗಳೂರು: ರಾಜ್ಯಪಾಲರ ಹುದ್ದೆ ಸಾಂವಿಧಾನ ನೀಡಿರುವ ಪೀಠ. ರಾಜ್ಯಪಾಲರ ಕಚೇರಿ ಒಂದು ರಾಜಕೀಯ ಪಕ್ಷದ ಕಚೇರಿ ಆಗಬಾರದು. ಸಂವಿಧಾನಿಕವಾಗಿ ಈ ಹುದ್ದೆಗೆ ಇರುವ ಘನತೆದೆ ಧಕ್ಕೆ ಬರುವಂತೆ ನಡೆದುಕೊಳ್ಳಬಾರದು ಎಂಬುದು ನಮ್ಮ ಅಭಿಲಾಷೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ರಾಜ್ಯಪಾಲರ ಪಕ್ಷಪಾತ ಧೋರಣೆ ಖಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಶನಿವಾರ ರಾಜಭವನ ಚಲೋ ಪ್ರತಿಭಟನೆ ಹಮ್ಮಿಕೊಂಡಿತ್ತು. ಮೊದಲು ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿ ರಾಜ್ಯಾಪಾಲರ ವಿರುದ್ಧ ಘೋಷಣೆ ಕೂಗಿದರು.
ನಂತರ ಕಾಲ್ನಡಿಗೆ ಮೂಲಕ ರಾಜಭವನಕ್ಕೆ ತೆರಳಿದ ಕಾಂಗ್ರೆಸ್ ಪಕ್ಷದ ನಿಯೋಗವು ಲೋಕಾಯುಕ್ತ ಎಸ್ ಐಟಿ ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ ಮತ್ತು ಜನಾರ್ಧನ ರೆಡ್ಡಿ ಅವರ ವಿಚಾರಣೆಗೆ ಅನುಮತಿ ನೀಡಿ ಎಂದು ಸಲ್ಲಿಸಿರುವ ಮನವಿಗೆ ಅನುಮತಿ ನೀಡಬೇಕು ಎಂದು ಮನವಿ ಮಾಡಿದರು.
ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು “ರಾಜ್ಯಪಾಲರು ನಮಗೆ ಟೀ, ಕಾಫಿ ಮತ್ತು ಉಪಹಾರವನ್ನು ಕೊಟ್ಟು ಉಪಚರಿಸಿದರು. ಎಲ್ಲದಕ್ಕಿಂತ ಮುಖ್ಯವಾಗಿ ನಿಮಗೆ ನ್ಯಾಯ ನೀಡುತ್ತೇವೆ ಎಂದು ಭರವಸೆ ನೀಡಿದರು” ಎಂದು ತಿಳಿಸಿದರು. ಇದನ್ನೂ ಓದಿ: ಚನ್ನಪಟ್ಟಣ: ಅಭ್ಯರ್ಥಿ ಆಯ್ಕೆ ಕುರಿತು ಪ್ರಲ್ಹಾದ್ ಜೋಶಿ ಹೇಳಿದ್ದೇನು?
“ಲೋಕಾಯುಕ್ತ ಎಸ್ ಐಟಿ ಅವರು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರಮಂತ್ರಿ ಕುಮಾರಸ್ವಾಮಿ ಹಾಗೂ ಮೂರು ಜನ ಮಾಜಿ ಮಂತ್ರಿಗಳ ಅಕ್ರಮಗಳ ವಿರುದ್ಧ ನ್ಯಾಯಾಲಯದ ಸೂಚನೆಯಂತೆ ಸಂಪೂರ್ಣ ತನಿಖೆ ನಡೆಸಿ ವರದಿ ನೀಡಿದ್ದಾರೆ. ಆದರೂ ಏನೂ ಕ್ರಮ ತೆಗೆದುಕೊಂಡಿಲ್ಲ. ನಮ್ಮ ಮುಖ್ಯಮಂತ್ರಿಗಳ ಮೇಲೆ ಕ್ರಮ ಕೈಗೊಳ್ಳಲು ಮುಂದಾಗುವ ರಾಜ್ಯಪಾಲರು, ಅವರ ಮೇಲೆ ಏಕೆ ಕ್ರಮ ತೆಗೆದುಕೊಂಡಿಲ್ಲ. ನೀವು ತಾರತಮ್ಯ ಎಸಗಿ ನಮ್ಮ ವಿರುದ್ಧ ಕೆಲಸ ಮಾಡಿದ್ದಾರಲ್ಲವೇ” ಎಂದು ಹೇಳಿದರು.