ಗ್ರಾಮ ವಾಸ್ತವ್ಯ: ನಾಳೆ ಸಿಎಂ ಕರೇಗುಡ್ಡಕ್ಕೆ ಭೆಟಿ

ಗ್ರಾಮ ವಾಸ್ತವ್ಯ: ನಾಳೆ ಸಿಎಂ ಕರೇಗುಡ್ಡಕ್ಕೆ ಭೆಟಿ

ರಾಯಚೂರು, ಜೂನ್. 25: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯಕ್ಕೆ ರಾಯಚೂರು ಜಿಲ್ಲೆಯಲ್ಲಿ ಸಕಲ ಸಿದ್ಧತೆ ನಡೆದಿದೆ. ಮಾನ್ವಿ ತಾಲೂಕಿನ ಕರೇಗುಡ್ಡದಲ್ಲಿ ನಾಳೆ ಗ್ರಾಮ ವಾಸ್ತವ್ಯ ನಡೆಯಲಿದೆ.

ಮಾನ್ವಿ ತಾಲೂಕಿನ ಕರೇಗುಡ್ಡದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ನಾಳೆ  ಗ್ರಾಮ ವಾಸ್ತವ್ಯ ಮಾಡುತ್ತಿದ್ದಾರೆ, ಜನರ ಅಹವಾಲು ಸ್ವೀಕರಿಸಲಿದ್ದಾರೆ. ಜಿಲ್ಲಾಡಳಿತ ಇದಕ್ಕಾಗಿ ಅಗತ್ಯ ವ್ಯವಸ್ಥೆಯನ್ನು ಮಾಡಿದೆ.

ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡ ಅವರು, ಜನತಾದರ್ಶನ ನಡೆಯಲಿರುವ ಬೃಹತ್ ವೇದಿಕೆ, ಮುಖ್ಯಮಂತ್ರಿಗಳು ಗ್ರಾಮ ವಾಸ್ತವ್ಯ ಮಾಡಲಿರುವ ಶಾಲೆ, ಪಾರ್ಕಿಂಗ್, ವಿವಿಧ ಮಳಿಗೆಗಳು ಸೇರಿದಂತೆ ನಡೆದಿರುವ ಸಿದ್ದತೆಗಳನ್ನು ಪರಿಶೀಲನೆ ನಡೆಸಿದರು

ಬೃಹತ್ ವೇದಿಕೆ ನಿರ್ಮಾಣ ಕಾರ್ಯ ಮತ್ತು ವಿವಿಧ ಕಡೆಯಿಂದ ಆಗಮಿಸುವ ಜನರಿಗೆ ಕುಳಿತುಕೊಳ್ಳಲು ಕುರ್ಚಿ ವ್ಯವಸ್ಥೆ, ಪಾರ್ಕಿಂಗ್ ಹಾಗೂ ಇತರ ವ್ಯವಸ್ಥೆಗಳನ್ನು ಪರಿಶೀಲಿಸಿದ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.

ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ‘ರಾಯಚೂರು ವಿವಿಗೆ ಸಂಬಂಧಿಸಿದಂತೆ ರಾಜ್ಯಪಾಲರನ್ನು ಭೇಟಿಯಾಗಿ ವಿವಿಯ ತುರ್ತು ವಿವರಿಸಿ ಮನವಿ ಪತ್ರ ಸಲ್ಲಿಸಿ ಕಾರ್ಯಾರಂಭಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಹೇಳಿದರು.

‘ಮಾನ್ವಿಯಲ್ಲಿ ಮಿನಿವಿಧಾನಸೌಧ ನಿರ್ಮಾಣ, ರಿಂಗ್ ರೋಡ್ ನಿರ್ಮಾಣ, ರಾಯಚೂರು ಐಐಟಿ ಸ್ಥಾಪನೆ, ಮಾನ್ವಿಯಲ್ಲಿ ಕ್ರೀಡಾಂಗಣ ನಿರ್ಮಾಣ ಸೇರಿದಂತೆ ಬಹುತೇಕ ಬೇಡಿಕೆಗಳನ್ನು ಮುಖ್ಯಮಂತ್ರಿಗಳು ಈಡೇರಿಸಲಿದ್ದಾರೆ’ ಎಂದು ತಿಳಿಸಿದರು.

ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಬಿಜೆಪಿಯವರು ಪ್ರತಿಭಟನೆ ಮಾಡುವ ಸಾಧ್ಯತೆ ಇದೆ. ಮುಖ್ಯಮಂತ್ರಿಗಳ ಭದ್ರತೆ ವಿಚಾರವಾಗಿ ಪೊಲೀಸರು ತೀರ್ಮಾನ ಕೈಗೊಳ್ಳಲಿದ್ದಾರೆ. ಎಲ್ಲಾ ವ್ಯವಸ್ಥೆಗಳನ್ನು ಅವರು ನೋಡಿಕೊಳ್ಳಲಿದ್ದಾರೆ.

ಜಿಲ್ಲೆಯ ನೀರಾವರಿ ವಿಚಾರದ ಕುರಿತು ಮಾತನಾಡಲು ಸುಮಾರು 25 ಸ್ವಾಮೀಜಿಗಳು ಮುಖ್ಯಮಂತ್ರಿಗಳ ಭೇಟಿಗೆ ಸಮಯ ಕೇಳಿದ್ದಾರೆ. ಜೂನ್ 26ರ ಸಂಜೆ 6ರ ನಂತರ ಅವರಿಗೆ ಸಮಯ ನೀಡಲು ಜಿಲ್ಲಾಡಳಿತ ತೀರ್ಮಾನಿಸಿದೆ.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಪುನಃ ಆರಂಭಿಸಿದ್ದಾರೆ. ಯಾದಗಿರಿ ಜಿಲ್ಲೆಯ ಚಂಡರಕಿ ಗ್ರಾಮದಲ್ಲಿ ಅವರು ವಾಸ್ತವ್ಯ ಹೂಡಿದ್ದರು. ಇದು ಅವರ 2ನೇ ಗ್ರಾಮ ವಾಸ್ತವ್ಯ ಕಾರ್ಯಕ್ರಮವಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos