ಚೆನ್ನೈ ವಿರುದ್ಧ ಲಕ್ನೋಗೆ ಭರ್ಜರಿ ಜಯ

ಚೆನ್ನೈ ವಿರುದ್ಧ ಲಕ್ನೋಗೆ ಭರ್ಜರಿ ಜಯ

ಬೆಂಗಳೂರು: ನಿನ್ನೆ ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ  34ನೇ ಪಂದ್ಯದಲ್ಲಿ ಆತಿಥೇಯ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪ್ರವಾಸಿ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿತ್ತು.

ನಾಯಕ ಕೆ ಎಲ್ ರಾಹುಲ್ ಹಾಗೂ ಕ್ವಿಂಟನ್ ಡಿ ಕಾಕ್ ಅವರ ಭರ್ಜರಿ ಅರ್ಧಶತಕಗಳ ನೆರವಿನಿಂದ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಎದುರು ಲಖನೌ ಸೂಪರ್ ಜೈಂಟ್ಸ್ ತಂಡವು 08 ವಿಕೆಟ್ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಸತತ ಎರಡು ಸೋಲುಗಳ ಬಳಿಕ ಲಖನೌ ತಂಡವು ಗೆಲುವಿನ ಹಳಿಗೆ ಮರಳುವಲ್ಲಿ ಯಶಸ್ವಿಯಾಗಿದೆ.

ಮೊದಲು ಟಾಸ್ ಸೋತು ಬ್ಯಾಟಿಂಗ್ ಮಾಡಲಿಳಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಉತ್ತಮ ಆರಂಭ ಪಡೆಯಲು ವಿಫಲವಾಯಿತು.  ಒಂದು ತುದಿಯಲ್ಲಿ ನಿರಂತರ ವಿಕೆಟ್ ಬೀಳುತ್ತಿದ್ದರೂ ಮತ್ತೊಂದು ತುದಿಯಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದ ರವೀಂದ್ರ ಜಡೇಜಾ 40 ಎಸೆತಗಳನ್ನು ಎದುರಿಸಿ 5 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ ಅಜೇಯ 57 ರನ್ ಬಾರಿಸಿದರು. ಇನ್ನು ಕೊನೆಯಲ್ಲಿ ಕ್ರೀಸ್‌ಗಿಳಿದ ಧೋನಿ ಕೇವಲ 9 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಅಜೇಯ 28 ರನ್ ಬಾರಿಸಿ ತಂಡದ ಮೊತ್ತವನ್ನು 175ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು.

ಗೆಲ್ಲಲು 177 ರನ್‌ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಲಖನೌ ತಂಡಕ್ಕೆ ನಾಯಕ ಕೆ ಎಲ್ ರಾಹುಲ್ ಹಾಗೂ ವಿಕೆಟ್ ಕೀಪರ್ ಬ್ಯಾಟರ್ ಕ್ವಿಂಟನ್ ಡಿ ಕಾಕ್ ಭರ್ಜರಿ ಆರಂಭ ಒದಗಿಸಿಕೊಟ್ಟರು. ಚೆನ್ನೈ ಸೂಪರ್ ಕಿಂಗ್ಸ್‌ ಬೌಲರ್‌ಗಳನ್ನು ದಿಟ್ಟವಾಗಿ ಎದುರಿಸಿದ ಈ ಜೋಡಿ ಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಭದ್ರಬುನಾದಿ ಹಾಕಿ ಕೊಟ್ಟಿತು. ಉತ್ತಮವಾಗಿ ಬ್ಯಾಟ್ ಬೀಸಿದ ಕ್ವಿಂಟನ್ ಡಿ ಕಾಕ್ ಕೇವಲ 43 ಎಸೆತಗಳನ್ನು 54 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇನ್ನು ಮತ್ತೊಂದು ತುದಿಯಲ್ಲಿ ಜವಾಬ್ದಾರಿಯುತವಾಗಿ ನಾಯಕನ ಆಟವಾಡಿದ ಕೆ ಎಲ್ ರಾಹುಲ್ 53 ಎಸೆತಗಳನ್ನು  82 ರನ್ ಬಾರಿಸಿ ಪತೀಶ್ ಪತಿರಣ ಬೌಲಿಂಗ್‌ನಲ್ಲಿ ಜಡೇಜಾ ಹಿಡಿದ ಅದ್ಭುತ ಕ್ಯಾಚ್‌ಗೆ ಪೆವಿಲಿಯನ್ ಹಾದಿ ಹಿಡಿದರು.

ಇನ್ನು ಕೊನೆಯಲ್ಲಿ ನಿಕೋಲಸ್ ಪೂರನ್ 12 ಎಸೆತಗಳನ್ನು ಎದುರಿಸಿ ಅಜೇಯ 23 ರನ್ ಸಿಡಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಮತ್ತೊಂದು ತುದಿಯಲ್ಲಿ ಮಾರ್ಕಸ್ ಸ್ಟೋನಿಸ್ ಅಜೇಯ 8 ರನ್ ಗಳಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos