ನವದೆಹಲಿ, ಡಿ. 18: ಇಡೀ ದೇಶದ ಗಮನ ಸೆಳೆದಿದ್ದ ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿ ಅಕ್ಷಯ್ ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಪೀಠ ಈ ಅರ್ಜಿಯನ್ನು ವಜಾಗೊಳಿಸಿದ್ದು, ಹೀಗಾಗಿ ನಾಲ್ವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ಕಾಯಂ ಆದಂತಾಗಿದೆ.
7 ವರ್ಷಗಳ ಹಿಂದೆ ನವದೆಹಲಿಯಲ್ಲಿ ನಡೆದ ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿಗಳಲ್ಲಿ ಒಬ್ಬರಾದ ಅಕ್ಷಯ್ ಠಾಕೂರ್ ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್ ಅಪರಾಧಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ಅಪರಾಧಿಯ ಗಲ್ಲು ಶಿಕ್ಷೆಯನ್ನು ಎತ್ತಿಹಿಡಿದಿದೆ.
2012ರಲ್ಲಿ ದೆಹಲಿಯಲ್ಲಿ ನಡೆದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಅಕ್ಷಯ್ ಠಾಕೂರ್, ಪವನ್ ಗುಪ್ತಾ, ವಿನಯ್ ಶರ್ಮಾ, ಮುಖೇಶ್ ಸಿಂಗ್ ಮತ್ತು ರಾಮ್ ಸಿಂಗ್ ಅವರಿಗೆ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ನಾಲ್ವರು ಅಪರಾಧಿಗಳಲ್ಲಿ ಪವನ್ ಗುಪ್ತಾ, ವಿನಯ್ ಶರ್ಮಾ ಮತ್ತು ಮುಖೇಶ್ ಸಿಂಗ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿ ತಿರಸ್ಕೃತಗೊಂಡಿತ್ತು. ಮತ್ತೋರ್ವ ಅಪರಾಧಿ ಅಕ್ಷಯ್ ಠಾಕೂರ್ ಸುಪ್ರೀಂಕೋರ್ಟ್ನಲ್ಲಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆಯಿಂದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್ಎ ಬೋಬ್ಡೆ ಮಂಗಳವಾರ ಹಿಂದೆ ಸರಿದಿದ್ದರು. ನ್ಯಾ. ಬೋಬ್ಡೆ ಅವರ ಸಂಬಂಧಿಯೊಬ್ಬರು ನಿರ್ಭಯಾ ಕುಟುಂಬದ ಪರವಾಗಿ ಈ ಕೇಸಿನಲ್ಲಿ ವಕಾಲತ್ತು ವಹಿಸಿದ್ದರಿಂದ ಅವರು ವಿಚಾರಣೆಯಿಂದ ಹಿಂದೆ ಸರಿದಿದ್ದರು.
ಇಂದು ಬೆಳಗ್ಗೆ ಆರ್. ಭಾನುಮತಿ, ಅಶೋಕ್ ಭೂಷಣ್ ಮತ್ತು ಎ.ಎಸ್. ಬೋಪಣ್ಣ ಅವರ ತ್ರಿಸದಸ್ಯ ಪೀಠ ಅಕ್ಷಯ್ ಠಾಕೂರ್ ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ್ದು, ಗಲ್ಲು ಶಿಕ್ಷೆಯನ್ನು ಎತ್ತಿ ಹಿಡಿದಿದೆ. ಈ ಮೂಲಕ ಐತಿಹಾಸಿಕ ತೀರ್ಪು ನೀಡಿರುವ ಸುಪ್ರೀಂಕೋರ್ಟ್ ನಿರ್ಧಾರದಿಂದ ನಿರ್ಭಯಾ ಕುಟುಂಬಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.