MI ಅಬ್ಬರಕ್ಕೆ ತತ್ತರಿಸಿದ RCB

MI ಅಬ್ಬರಕ್ಕೆ ತತ್ತರಿಸಿದ RCB

ಬೆಂಗಳೂರು: ನಿನ್ನೆ ಮುಂಬೈನ ಐಕಾನಿಕ್ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ 25ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ 7 ವಿಕೆಟ್‌ಗಳ ಸುಲಭ ಗೆಲುವು ಸಾಧಿಸಿತು.

ಬೌಲಿಂಗ್‌ನಲ್ಲಿ ಹೆಚ್ಚಿನ ರನ್ ಬಿಟ್ಟುಕೊಟ್ಟರೂ ಮುಂಬೈ ಇಂಡಿಯನ್ಸ್ ತಂಡ ಬ್ಯಾಟಿಂಗ್‌ನಲ್ಲಿ ಸೂಕ್ತ ಪ್ರತ್ಯುತ್ತರ ನೀಡಿತು ಮತ್ತು ಪ್ರಸಕ್ತ ಪಂದ್ಯಾವಳಿಯಲ್ಲಿ ಹ್ಯಾಟ್ರಿಕ್ ಸೋಲಿನ ಬಳಿಕ ಎರಡನೇ ಗೆಲುವು ದಾಖಲಿಸಿತು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ತಂಡದ ಪರ ಇನ್ನಿಂಗ್ಸ್ ಆರಂಭಿಸಿದ ವಿರಾಟ್ ಕೊಹ್ಲಿ ಮತ್ತು ಫಾಫ್ ಡು ಪ್ಲೆಸಿಸ್ ದೊಡ್ಡ ಆರಂಭ ನೀಡಲು ವಿಫಲರಾದರು. ಈ ಜೋಡಿ 2.3 ಓವರ್‌ಗಳಲ್ಲಿ ಕೇವಲ 14 ರನ್‌ಗಳ ಜೊತೆಯಾಟ ನೀಡಿದರು. 3 ರನ್ ಗಳಿಸಿ ಆಡುತ್ತಿದ್ದ ವಿರಾಟ್ ಕೊಹ್ಲಿ ಕ್ಯಾಚ್ ನೀಡಿ ಔಟಾದರು. ನಂತರ ಬಂದ ವಿಲ್ ಜ್ಯಾಕ್ಸ್ ಕೇವಲ 8 ರನ್‌ಗಳಿಗೆ ತಮ್ಮ ಆಟ ಮುಗಿಸಿದರು. ಈ ವೇಳೆ ಫಾಫ್ ಡು ಪ್ಲೆಸಿಸ್ ಮತ್ತು ರಜತ್ ಪಾಟಿದಾರ್ ಜೊತೆಗೂಡಿದರು ಮತ್ತು ಈ ಜೋಡಿ 3ನೇ ವಿಕೆಟ್‌ಗೆ 82 ರನ್‌ಗಳ ಜೊತೆಯಾಟ ನೀಡಿದರು. ರಜತ್ ಪಾಟಿದಾರ್ 26 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್‌ಗಳ ಸಮೇತ 50 ರನ್ ಗಳಿಸಿ ವಿಕೆಟ್ ನೀಡಿದರು. ನಂತರ ಬಂದ ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತೊಮ್ಮೆ ಸೊನ್ನೆಗೆ ಔಟಾದರು.

ನಾಯಕ ಫಾಫ್ ಡು ಪ್ಲೆಸಿಸ್ 40 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್‌ಗಳ ಸಮೇತ 61 ರನ್ ಬಾರಿಸಿದರು. ಆ ಬಳಿಕ ಇಂಪ್ಯಾಕ್ಟ್ ಪ್ಲೇಯರ್ ಸೌರವ್ ಚೌಹಾಣ್ ಕೇವಲ 9 ರನ್ ಗಳಿಸಿ ಔಟಾದರು. ಇನ್ನು ಕೊನೆಯಲ್ಲಿ ಅಬ್ಬರದ ಬ್ಯಾಟಿಂಗ್ ಮಾಡಿ ದಿನೇಶ್ ಕಾರ್ತಿಕ್ ಕೇವಲ 23 ಎಸೆತಗಳಲ್ಲಿ 5 ಬೌಂಡರಿ ಹಾಗೂ 4 ಸಿಕ್ಸರ್‌ಗಳ ಸಮೇತ ಅಜೇಯ 53 ರನ್ ಗಳಿಸಿದರು.

ತಂಡ ರಜತ್ ಪಾಟಿದಾರ್, ನಾಯಕ ಫಾಫ್ ಡು ಪ್ಲೆಸಿಸ್ ಮತ್ತು ದಿನೇಶ್ ಕಾರ್ತಿಕ್ ಅವರ ಅರ್ಧಶತಕಗಳ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 196 ರನ್‌ಗಳನ್ನು ಗಳಿಸಿತು.

197 ರನ್‌ಗಳ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡ ಇಶಾನ್ ಕಿಶನ್, ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಅವರ ಸ್ಫೋಟಕ ಬ್ಯಾಟಿಂಗ್ ಸಹಾಯದಿಂದ ಕೇವಲ 15.3 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 199 ರನ್ ಗಳಿಸಿ 7 ವಿಕೆಟ್‌ಗಳ ಭರ್ಜರಿ ಗೆಲುವು ಕಂಡಿತು.

ಮುಂಬೈ ಇಂಡಿಯನ್ಸ್ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ರೋಹಿತ್ ಶರ್ಮಾ ಮತ್ತು ಇಶಾನ್ ಕಿಶನ್ ಆರಂಭದಿಂದಲೇ ಆಕ್ರಮಣಕಾರಿ ಆಟಕ್ಕೆ ಮುಂದಾಗಿ ಉತ್ತಮ ಆರಂಭ ಒದಗಿಸಿದರು. ಈ ಜೋಡಿ ಮೊದಲ ವಿಕೆಟ್‌ಗೆ ಕೇವಲ 8.5 ಓವರ್‌ಗಳಲ್ಲಿ 101 ರನ್‌ಗಳ ಜೊತೆಯಾಟ ನಿರ್ಮಿಸಿದರು. ಇಶಾನ್ ಕಿಶನ್ 34 ಎಸೆತಗಳಲ್ಲಿ 7 ಬೌಂಡರಿ ಹಾಗೂ 5 ಸಿಕ್ಸರ್‌ಗಳ ಮೂಲಕ 69 ರನ್ ಬಾರಿಸಿದರೆ, ರೋಹಿತ್ ಶರ್ಮಾ 24 3 ಬೌಂಡರಿ ಹಾಗೂ 3 ಸಿಕ್ಸರ್‌ಗಳ ಸಮೇತ 38 ರನ್ ಗಳಿಸಿದರು.

ನಂತರ ಬಂದ ಸೂರ್ಯಕುಮಾರ್ ಯಾದವ್ 19 ಎಸೆತಗಳಲ್ಲಿ 5 ಬೌಂಡರಿ ಹಾಗೂ 4 ಸಿಕ್ಸರ್‌ಗಳ ಸಮೇತ 52 ರನ್ ಸಿಡಿಸಿದರೆ, ನಾಯಕ ಹಾರ್ದಿಕ್ ಪಾಂಡ್ಯ ಕೇವಲ 6 ಎಸೆತಗಳಲ್ಲಿ 3 ಸಿಕ್ಸರ್‌ಗಳ ನೆರವಿನಿಂದ ಅಜೇಯ 21 ರನ್ ಗಳಿಸಿದರೆ, ತಿಲಕ್ ವರ್ಮಾ 10 ಎಸೆತಗಳಲ್ಲಿ 3 ಬೌಂಡರಿ ಸಹಾಯದಿಂದ ಅಜೇಯ 16 ರನ್ ಗಳಿಸಿದರು.

ಬೌಲಿಂಗ್‌ನಲ್ಲಿ ಮುಂಬೈ ಇಂಡಿಯನ್ಸ್ ಪರ ಜಸ್ಪ್ರೀತ್ ಬುಮ್ರಾ ಮಾರಕ ಬೌಲಿಂಗ್ ದಾಳಿ ನಡೆಸಿದರು. ತಮ್ಮ 4 ಓವರ್‌ಗಳ ಕೋಟಾದಲ್ಲಿ ಕೇವಲ 21 ರನ್ ನೀಡಿ 5 ವಿಕೆಟ್ ಕಬಳಿಸಿದರು. ಉಳಿದಂತೆ ಜೆರಾಲ್ಡ್ ಕೋಯಟ್ಜಿ, ಆಕಾಶ್ ಮಧ್ವಲ್ ಮತ್ತು ಶ್ರೇಯಸ್ ಗೋಪಾಲ್ ತಲಾ ಒಂದೊಂದು ವಿಕೆಟ್ ಪಡೆದರು.

 

ಫ್ರೆಶ್ ನ್ಯೂಸ್

Latest Posts

Featured Videos