ಬೆಂಗಳೂರು: ನಿನ್ನೆ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ 40ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಗುಜರಾತ್ ಟೈಟನ್ಸ್ ವಿರುದ್ಧ ರೋಚಕ ಗೆಲುವು ಸಾಧಿಸಿತು.
ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಸೋತು, ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿತು.
ಅದರಲ್ಲೂ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಷಭ್ ಪಂತ್ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಆಕ್ರಮಣಕಾರಿ ಆಟದೊಂದಿಗೆ ಗುಜರಾತ್ ಟೈಟಾನ್ಸ್ ಬೌಲರ್ಗಳ ಬೆಂಡೆತ್ತಿದ ಪಂತ್ ಕ್ರೀಸ್ನಲ್ಲಿ ರುದ್ರತಾಂಡವ ತೋರಿಸಿದರು.
ಈ ಪ್ರಚಂಡ ಬ್ಯಾಟಿಂಗ್ನೊಂದಿಗೆ ರಿಷಭ್ ಪಂತ್ ಕೇವಲ 43 ಎಸೆತಗಳಲ್ಲಿ 8 ಭರ್ಜರಿ ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ ಅಜೇಯ 88 ರನ್ ಬಾರಿಸಿದರು. ಈ ಅರ್ಧಶತಕದೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ಪರ ಅತ್ಯಧಿಕ ಹಾಫ್ ಸೆಂಚುರಿ ಸಿಡಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.