ಬೆಂಗಳೂರು: ದೋಸ್ತಿ ಸರ್ಕಾರದ ವಿರುದ್ಧ ಅಸಮಾಧಾನಗೊಂಡಿದ್ದ ಕಾಂಗ್ರೆಸ್ ನ ನಾಲ್ವರು ಅತೃಪ್ತ ಶಾಸಕರ ಅನರ್ಹತೆಗೆ ಕೋರಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಇಂದು ಸ್ಪೀಕರ್ ಗೆ ದೂರು ನೀಡಲಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ಶಾಸಕಾಂಗ ಸಭೆಗೆ ಗೈರಾದರೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಸಿದ್ದರಾಮಯ್ಯ ಈ ಹಿಂದೆ ಖಡಕ್ ಎಚ್ಚರಿಕೆ ನೀಡಿದ್ದರು.
ಆದರೂ ಸಿಎಲ್ ಪಿ ಸಭೆಗೆ ಶಾಸಕರಾದ ರಮೇಶ್ ಜಾರಕಿಹೊಳಿ, ಉಮೇಶ್ ಜಾಧವ್ . ಬಿ. ನಾಗೇಂದ್ರ ಮತ್ತು ಮಹೇಶ್ ಕಮಟಳ್ಳಿ ಅವರು ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಶಾಸಕರ ಅನರ್ಹತೆಗೆ ದೂರು ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ.
ನಾಲ್ವರು ಕೈ ಅತೃಪ್ತ ಶಾಸಕರು ಪಕ್ಷ ವಿರೋಧಿ ಚಟುವಟಿಕೆ, ಶಾಸಕಾಂಗ ಪಕ್ಷದ ಸಭೆಗೆ ನೋಟೀಸ್ ನೀಡಿದರೂ ಗೈರಾದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಸ್ಪೀಕರ್ ರಮೇಶ್ ಕುಮಾರ್ ದೂರು ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.