ನವದೆಹಲಿ, ಮೇ. 25, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭೆ ಚುನಾವಣೆಯಲ್ಲಿ ದೇಶದಲ್ಲೆಡೆ ಸೋತು ಸುಣ್ಣವಾಗಿರುವ ಕಾಂಗ್ರೆಸ್ ಗೆ ಈ ಬಾರಿಯೂ ಅಧಿಕೃತ ವಿರೋಧ ಪಕ್ಷದ ಸ್ಥಾನ ಕೂಡ ಸಿಗದಂತಾಗಿದೆ.
ಇದೇ ವೇಳೆಯಲ್ಲಿ ಸೋಲಿನ ಹೊಣೆ ಹೊತ್ತು ಹಲವು ನಾಯಕರು ರಾಜೀನಾಮೆ ನೀಡತೊಡಗಿದ್ದಾರೆ. ಉತ್ತರಪ್ರದೇಶ ಕಾಂಗ್ರೆಸ್ ಅಧ್ಯಕ್ಷ ರಾಜ್ ಬಬ್ಬರ್ ಪಕ್ಷದ ಅಭ್ಯರ್ಥಿಗಳ ಹೀನಾಯ ಸೋಲಿನ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕೂಡ ರಾಜೀನಾಮೆ ನೀಡುವ ಬಗ್ಗೆ ಇಂದು ನಡೆಯಲಿರುವ ಸಿಡಬ್ಲ್ಯುಸಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಿದ್ದಾರೆ.
ಇದು ಕೇಂದ್ರದ ವಿಚಾರವಾದರೆ, ರಾಜ್ಯದಲ್ಲಿಯೂ ಲೋಕಸಭೆ ಚುನಾವಣೆ ಫಲಿತಾಂಶದಿಂದ ಕಂಪನವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಮೊದಲ ವಿಕೆಟ್ ಪತನವಾಗಿದೆ. ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಹೆಚ್.ಕೆ. ಪಾಟೀಲ್ ರಾಜೀನಾಮೆ ನೀಡಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಹೀನಾಯ ಸೋಲಿನ ನೈತಿಕ ಹೊಣೆಹೊತ್ತು ಅವರು ರಾಜೀನಾಮೆ ನೀಡಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕಾಂಗ್ರೆಸ್ ಮೊದಲ ವಿಕೆಟ್ ಪತನವಾಗಿದೆ. ಫಲಿತಾಂಶದ ದಿನವೇ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡುವ ಬಗ್ಗೆ ಮಾತನಾಡಿದ್ದರಾದರೂ, ರಾಜೀನಾಮೆ ನೀಡದಂತೆ ಪಕ್ಷದ ನಾಯಕರು ತಿಳಿಸಿದ್ದಾರೆ ಎನ್ನಲಾಗಿದೆ.